Crime Newsಕ್ರೈಂ ಸುದ್ದಿರಾಜ್ಯ ಸುದ್ದಿ

ಬಸ್ ಪ್ರಯಾಣಿಕರ ಗಮನ ಸೆಳೆದು ಒಡವೆ ಕದಿಯುತ್ತಿದ್ದ ಅಂತರರಾಜ್ಯ ಕಳ್ಳ ಪೊಲೀಸ್ ಬಲೆಗೆ: 20 ಲಕ್ಷದ ಚಿನ್ನಾಭರಣ ಜಪ್ತಿ

Share News

ಬಂಟ್ವಾಳ: ಚಲಿಸುವ ಬಸ್‌ನಲ್ಲಿ ಪ್ರಯಾಣಿಕರ ಬ್ಯಾಗ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಅಂತರರಾಜ್ಯ ಕಳ್ಳನನ್ನು ಬಂಟ್ವಾಳ ನಗರ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ ₹20 ಲಕ್ಷ ಮೌಲ್ಯದ ಚಿನ್ನದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಧ್ಯಪ್ರದೇಶದ ಧಾರಾ ಜಿಲ್ಲೆಯ ನಿವಾಸಿ ಸಮದ್ ಖಾನ್ (37) ಬಂಧಿತ ಆರೋಪಿ. ಈತ ಅಂತರರಾಜ್ಯ ಮಟ್ಟದ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಕುಖ್ಯಾತ ವ್ಯಕ್ತಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಳೆದ ನವೆಂಬರ್ 19, 2025ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಈ ಕಳ್ಳತನ ನಡೆದಿತ್ತು. ಪ್ರಯಾಣಿಕರೊಬ್ಬರು ತಮ್ಮ ಬ್ಯಾಗ್‌ನಲ್ಲಿ ಇರಿಸಿದ್ದ ಸುಮಾರು 174 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳರು ಲಪಟಾಯಿಸಿದ್ದರು. ಈ ಕುರಿತು ಸಂತ್ರಸ್ತರು ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡಿದ್ದರು. ತಾಂತ್ರಿಕ ಮಾಹಿತಿ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಪೂರ್ಣ ಪ್ರಮಾಣದ ಚಿನ್ನಾಭರಣಗಳನ್ನು (174 ಗ್ರಾಂ) ಜಪ್ತಿ ಮಾಡಲಾಗಿದೆ. ಇದರ ಪ್ರಸ್ತುತ ಮಾರುಕಟ್ಟೆ ಮೌಲ್ಯ ಸುಮಾರು ₹20 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ಸಮದ್ ಖಾನ್ ಕೇವಲ ಕರ್ನಾಟಕ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲಿಯೂ ಇಂತಹ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈತ ವೃತ್ತಿಪರ ಕಳ್ಳನಾಗಿದ್ದು, ಜನನಿಬಿಡ ಬಸ್‌ಗಳನ್ನೇ ತನ್ನ ಕೃತ್ಯಕ್ಕೆ ಆರಿಸಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹೆಚ್ಚಿನ ವಿಚಾರಣೆ ಮುಂದುವರಿದಿದೆ.

ವರದಿ :- ಆಂಟೋನಿ ಪತ್ರಕರ್ತ


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!