ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುರಾಜಕೀಯರಾಜ್ಯ ಸುದ್ದಿಸ್ಥಳೀಯ ಸುದ್ದಿಗಳು

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಕ್ರಮಕ್ಕೆ ಸಿ.ಕೆ. ರಾಮಮೂರ್ತಿ ಆಗ್ರಹ; ಶಿಕ್ಷಕರ ಸಂಘದ ಅಧ್ಯಕ್ಷರ ವಜಾಕ್ಕೆ ಎಸ್. ಹರೀಶ್ ಒತ್ತಾಯ

Share News

ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ಅವರು ಸಾರ್ವಜನಿಕವಾಗಿ ಅವಹೇಳನಕಾರಿ ಮಾತುಗಳನ್ನಾಡುತ್ತಾ ಚುನಾವಣಾ ನೀತಿಸಂಹಿತೆ ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಸಿ.ಕೆ. ರಾಮಮೂರ್ತಿ ಅವರು ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

​ಇಂದು ನಗರದ ಮಹಾರಾಣಿ ಕಾಲೇಜು ಸರ್ಕಲ್ ಬಳಿ ಇರುವ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಬಿಜೆಪಿ ನಿಯೋಗವು ಈ ಸಂಬಂಧ ಅಧಿಕೃತ ದೂರು ದಾಖಲಿಸಿತು. ನಿಯೋಗದಲ್ಲಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಹಾಗೂ ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಉಪಸ್ಥಿತರಿದ್ದರು.

ದೂರು ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸಿ.ಕೆ. ರಾಮಮೂರ್ತಿ ಅವರು, “ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗಳ ಸಂದರ್ಭದಲ್ಲಿ ಪ್ರದೀಪ್ ಈಶ್ವರ್ ಅವರು ಅತ್ಯಂತ ಕೀಳುಮಟ್ಟದ ಭಾಷೆ ಬಳಸುತ್ತಿದ್ದಾರೆ. ಬಿಜೆಪಿ ನಾಯಕರನ್ನು ‘ಕೋತಿಗಳು’ ಮತ್ತು ‘ಅಯೋಗ್ಯರು’ ಎಂದು ಸಂಬೋಧಿಸಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ. ಅವರೊಬ್ಬ ಹುಚ್ಚನಂತೆ ಆಡುತ್ತಿದ್ದು, ಕೂಡಲೇ ಅವರನ್ನು ಚುನಾವಣಾ ಪ್ರಚಾರದಿಂದ ಹೊರಹಾಕಬೇಕು. ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು,” ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು, ಬಾಗಲಕೋಟೆ ಉಪಚುನಾವಣೆ ವೇಳೆ ಸರ್ಕಾರಿ ನಿಯಮಗಳ ಉಲ್ಲಂಘನೆಯಾಗುತ್ತಿದೆ ಎಂದು ದೂರಿದರು.

​”ಸರ್ಕಾರಿ ನೌಕರರಾಗಿರುವ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರು ನುಗ್ಲಿ ಅವರು ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಬಹಿರಂಗವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಇದು ಸೇವಾ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದ್ದು, ಅವರನ್ನು ಕೂಡಲೇ ಸೇವೆಯಿಂದ ವಜಾ ಮಾಡಬೇಕು,” ಎಂದು ಆಗ್ರಹಿಸಿದರು. ಅಲ್ಲದೆ, ಕಾಂಗ್ರೆಸ್ ಪಕ್ಷವು ಧರ್ಮದ ಆಧಾರದ ಮೇಲೆ ಚುನಾವಣೆ ನಡೆಸುವ ಮೂಲಕ ನೀತಿಸಂಹಿತೆಯನ್ನು ಗಾಳಿಗೆ ತೂರುತ್ತಿದೆ ಎಂದು ಅವರು ಆರೋಪಿಸಿದರು.

​ಚುನಾವಣಾ ಆಯೋಗವು ಈ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ನಾಯಕರು ಈ ಸಂದರ್ಭದಲ್ಲಿ ಒತ್ತಾಯಿಸಿದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!