ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುರಾಜಕೀಯರಾಜ್ಯ ಸುದ್ದಿ

ಏಪ್ರಿಲ್ 17ಕ್ಕೆ ಕೊಡಗಿಗೆ ಸಿಎಂ ಸಿದ್ದರಾಮಯ್ಯ ಭೇಟಿ ಸಾಧ್ಯತೆ: ಪೂರ್ವ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

Share News

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 17 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

​ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಭೂಮಿ ಪೂಜೆ ಹಾಗೂ ಲೈನ್ ಮನೆಗಳಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ವಿತರಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಹಕ್ಕುಪತ್ರ ವಿತರಣೆ: ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಒಟ್ಟು 38 ಎಕರೆ ಜಾಗ ಗುರುತಿಸಲಾಗಿದ್ದು, 925 ನಿವೇಶನಗಳಲ್ಲಿ 1125 ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಗುರಿ ಹೊಂದಲಾಗಿದೆ.

​ಆಧಾರ್ ಶಿಬಿರಕ್ಕೆ ಆದೇಶ: ಕೆಲವು ಫಲಾನುಭವಿಗಳ ಬಳಿ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳಿಲ್ಲದ ಕಾರಣ, ತಕ್ಷಣವೇ ಸಂಬಂಧಪಟ್ಟ ಗ್ರಾಮಗಳಲ್ಲಿ ಆಧಾರ್ ಶಿಬಿರಗಳನ್ನು ಆಯೋಜಿಸಿ ದಾಖಲೆಗಳನ್ನು ಸಿದ್ಧಪಡಿಸಲು ಡಿಸಿ ತಾಕೀತು ಮಾಡಿದರು.

​ಜಿಲ್ಲಾಧಿಕಾರಿಗಳ ಭೇಟಿ: ದಾಖಲೆಗಳ ಸಿದ್ಧತೆ ಕಾರ್ಯದಲ್ಲಿ ಯಾವುದೇ ವಿಳಂಬ ಧೋರಣೆ ಸಹಿಸುವುದಿಲ್ಲ. ಜಿ.ಪಂ. ಸಿಇಒ ಅವರೊಂದಿಗೆ ತಾವು ಖುದ್ದಾಗಿ ಶಿಬಿರಗಳಿಗೆ ಭೇಟಿ ನೀಡುವುದಾಗಿ ಜಿಲ್ಲಾಧಿಕಾರಿ ಎಚ್ಚರಿಸಿದರು.

ಅಧಿಕಾರಿಗಳ ಸಮನ್ವಯ: ಕಂದಾಯ, ತಾಲ್ಲೂಕು ಪಂಚಾಯಿತಿ ಮತ್ತು ಐಟಿಡಿಪಿ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಈ ಸರ್ಕಾರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸೂಚಿಸಲಾಯಿತು.

ಐಟಿಡಿಪಿ ಯೋಜನಾ ಸಮನ್ವಯಾಧಿಕಾರಿ ಎಸ್. ಹೊನ್ನೇಗೌಡ ಅವರು ಮಾಹಿತಿ ನೀಡಿ, ಕೆದಮುಳ್ಳೂರು (116 ಫಲಾನುಭವಿಗಳು), ಬಾಳುಗೋಡು (37), ಕಳತ್ಮಾಡು (127), ಬಿರುನಾಣಿ (621) ಮತ್ತು ಕುರ್ಚಿ (224) ಗ್ರಾಮಗಳಲ್ಲಿ ಫಲಾನುಭವಿಗಳನ್ನು ಗುರುತಿಸಲಾಗಿದೆ. ಈ ಕುಟುಂಬಗಳಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಮನೆ ನಿರ್ಮಿಸಿಕೊಡುವ ಯೋಜನೆಯೂ ಇದೆ ಎಂದು ತಿಳಿಸಿದರು.

​ಸಭೆಯಲ್ಲಿ ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಹಾಗೂ ವಿವಿಧ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!