ಬಿಡದಿ ಜೋಡಿ ಕೊಲೆ ಪ್ರಕರಣ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಿಹಾರದ ಆರೋಪಿ ಗುಜರಾತ್ನಲ್ಲಿ ಬಂಧನ

ರಾಮನಗರ: ಜಿಲ್ಲೆಯ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯ ಈಗಲ್ ಟನ್ ರೆಸಾರ್ಟ್ನಲ್ಲಿ ನಡೆದಿದ್ದ ದಂಪತಿಗಳ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ ನಾಲ್ಕು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಿಡದಿ ಪೊಲೀಸರು ಯಶಸ್ವಿಯಾಗಿದ್ದಾರೆ.
ದಿನಾಂಕ 08.02.2022 ರಂದು ಈಗಲ್ ಟನ್ ರೆಸಾರ್ಟ್ನಲ್ಲಿ ವಾಸವಿದ್ದ ದಂಪತಿಗಳನ್ನು ಸುಲಿಗೆ ಮಾಡುವ ಉದ್ದೇಶದಿಂದ ಹತ್ಯೆ ಮಾಡಲಾಗಿತ್ತು. ಈ ಘೋರ ಕೃತ್ಯದ ಕುರಿತು ಬಿಡದಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ: 55/2022, ಕಲಂ: 302, 34 IPC ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನಿಂದಲೂ ಆರೋಪಿ ಪತ್ತೆಯಾಗದೆ ಪೊಲೀಸರಿಗೆ ಸವಾಲಾಗಿದ್ದ.
ಮೂಲತಃ ಬಿಹಾರ ರಾಜ್ಯದವನಾದ ಆರೋಪಿಯು ಕೊಲೆ ಮಾಡಿದ ನಂತರ ವಿವಿಧ ರಾಜ್ಯಗಳಲ್ಲಿ ಅಡಗಿಕೊಂಡಿದ್ದ. ಈತನ ಪತ್ತೆಗಾಗಿ ನಿರಂತರ ಮಾಹಿತಿ ಸಂಗ್ರಹಿಸುತ್ತಿದ್ದ ಬಿಡದಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡಕ್ಕೆ ಆರೋಪಿ ಗುಜರಾತ್ನಲ್ಲಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರ ತಂಡವು, ದಿನಾಂಕ 06.04.2026 ರಂದು ಗುಜರಾತ್ ರಾಜ್ಯದ ಅಹಮದಾಬಾದ್ ಜಿಲ್ಲೆಯಲ್ಲಿ ಆರೋಪಿಯನ್ನು ಸುತ್ತುವರೆದು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಸದ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ನಾಲ್ಕು ವರ್ಷಗಳ ಹಳೆಯ ಪ್ರಕರಣವನ್ನು ಬೆನ್ನತ್ತಿ, ತಾಂತ್ರಿಕ ಸಹಾಯ ಮತ್ತು ಗುಪ್ತಚರ ಮಾಹಿತಿ ಬಳಸಿ ಅಂತರರಾಜ್ಯ ಮಟ್ಟದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ ಬಿಡದಿ ಪೊಲೀಸರ ತಂಡದ ಕಾರ್ಯವೈಖರಿಗೆ ಸಾರ್ವಜನಿಕ ವಲಯದಲ್ಲಿ ಹಾಗೂ ಇಲಾಖೆಯಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.



