ಕುಕನೂರು: ಅಂಬೇಡ್ಕರ್ ಹಾಗೂ ದೇಶಭಕ್ತರ ಭಾವಚಿತ್ರಕ್ಕೆ ಸಗಣಿ ಎರಚಿದ ಕಿಡಿಗೇಡಿಗಳು; ಗ್ರಾಮದಲ್ಲಿ ಉದ್ವಿಗ್ನತೆ

ಕುಕನೂರು: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ವೀರಾಪುರ ಗ್ರಾಮದಲ್ಲಿ ಕಿಡಿಗೇಡಿಗಳು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ದೇಶಭಕ್ತರ ಭಾವಚಿತ್ರಗಳಿಗೆ ಸಗಣಿ ಎರಚಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಈ ಕೃತ್ಯದಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ವೀರಾಪುರ ಗ್ರಾಮದಲ್ಲಿ ಹಾಕಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಹಾನ್ ದೇಶಭಕ್ತರ ಭಾವಚಿತ್ರಗಳಿಗೆ ಬುಧವಾರ ತಡರಾತ್ರಿ ಕಿಡಿಗೇಡಿಗಳು ಸಗಣಿ ಎರಚಿ ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಗ್ರಾಮಸ್ಥರು ಇದನ್ನು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಮಹಾಪುರುಷರಿಗೆ ಅವಮಾನ ಮಾಡಿರುವುದನ್ನು ಕಂಡು ಆಕ್ರೋಶಗೊಂಡ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಕುಕನೂರು ಪಿಎಸ್ಐ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಗ್ರಾಮಸ್ಥರನ್ನು ಸಮಾಧಾನಪಡಿಸಿರುವ ಪೊಲೀಸರು, ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ದೇಶಕ್ಕಾಗಿ ಶ್ರಮಿಸಿದ ಮಹನೀಯರ ಭಾವಚಿತ್ರಕ್ಕೆ ಅವಮಾನ ಮಾಡಿರುವುದು ಇಡೀ ಸಮಾಜಕ್ಕೆ ಮಾಡಿದ ಅವಮಾನವಾಗಿದೆ. ಇಂತಹ ವಿಕೃತ ಮನಸ್ಸಿನ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ದಲಿತ ಸಂಘಟನೆಗಳು ಹಾಗೂ ಗ್ರಾಮದ ಮುಖಂಡರು ಒತ್ತಾಯಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಪ್ರಕ್ರಿಯೆ ನಡೆಯುತ್ತಿದೆ.



