ತಮಿಳುನಾಡಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಿರುಸಿನ ಪ್ರಚಾರ: ಸ್ಟಾಲಿನ್ ಕೈಬಲಪಡಿಸಲು ಮನವಿ

ಕೊಯಮತ್ತೂರು: ತಮಿಳುನಾಡು ವಿಧಾನಸಭಾ ಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಬಹಿರಂಗ ಸಮಾವೇಶ:
ಕೊಯಮತ್ತೂರು ಜಿಲ್ಲೆಯ ಕಾವುಂಡಪಾಳ್ಯಂ ವಿಧಾನಸಭಾ ಕ್ಷೇತ್ರದ ಇಡಿಕರೈನಲ್ಲಿ ಭಾನುವಾರ ನಡೆದ ಬೃಹತ್ ಬಹಿರಂಗ ಸಮಾವೇಶದಲ್ಲಿ ಸಚಿವರು ಭಾಗವಹಿಸಿ ಮಾತನಾಡಿದರು. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಜನಪರ ಆಡಳಿತವನ್ನು ಶ್ಲಾಘಿಸಿದ ಅವರು, ತಮಿಳುನಾಡಿನ ಅಭಿವೃದ್ಧಿಗಾಗಿ ಮೈತ್ರಿಕೂಟದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಸ್ಟಾಲಿನ್ ಅವರ ಕೈಬಲಪಡಿಸಬೇಕು ಎಂದು ಮತದಾರರಲ್ಲಿ ವಿನಂತಿಸಿದರು.
ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೂರ್ಯಪ್ರಕಾಶ್ ಪರ ಮತಯಾಚಿಸಿದ ಸಚಿವರು, “ಸೂರ್ಯಪ್ರಕಾಶ್ ಒಬ್ಬ ಉತ್ಸಾಹಿ ಯುವ ನಾಯಕ. ಅವರು ನಿಮ್ಮ ಮನೆಯ ಮಗನಾಗಿ, ನಿಮ್ಮ ಸೇವಕನಾಗಿ ಕೆಲಸ ಮಾಡಲಿದ್ದಾರೆ. ಅವರಿಗೆ ಹೆಚ್ಚಿನ ಮತಗಳ ಅಂತರದಿಂದ ಜಯ ಒದಗಿಸಿಕೊಡಬೇಕು” ಎಂದು ಮನವಿ ಮಾಡಿದರು. ಅಲ್ಲದೆ, ತಮಿಳುನಾಡಿನಲ್ಲಿ ಮತ್ತೊಮ್ಮೆ ಡಿಎಂಕೆ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ತೆಲಂಗಾಣದ ಜಲಸಂಪನ್ಮೂಲ ಸಚಿವ ಉತ್ತಮ್ ಕುಮಾರ್ ರೆಡ್ಡಿ ಸೇರಿದಂತೆ ಹಲವು ರಾಷ್ಟ್ರ ಮಟ್ಟದ ನಾಯಕರು ಭಾಗವಹಿಸಿದ್ದರು. ಡಿಎಂಕೆ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರಾದ ಸುರೇಶ್, ಜನಾರ್ಧನ, ಸಂಗೀತಾ ಮಹಾಲಿಂಗ ಹಾಗೂ ಸಾವಿರಾರು ಕಾರ್ಯಕರ್ತರು ಸಮಾವೇಶದಲ್ಲಿ ಉಪಸ್ಥಿತರಿದ್ದು, ಮೈತ್ರಿಕೂಟದ ಶಕ್ತಿ ಪ್ರದರ್ಶಿಸಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಭೇಟಿಯು ಈ ಭಾಗದ ಕನ್ನಡ ಭಾಷಿಕ ಮತದಾರರ ಮೇಲೆ ಹೆಚ್ಚಿನ ಪ್ರಭಾವ ಬೀರುವ ನಿರೀಕ್ಷೆಯಿದೆ.



