ಲಗ್ಗೆರೆಯಲ್ಲಿ ಕ್ಯಾಬ್ ಚಾಲಕರ ಹುಚ್ಚಾಟ: ಕಾರಿನ ಬಾನಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಚಾಲಕ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಲಗ್ಗೆರೆ ವ್ಯಾಪ್ತಿಯಲ್ಲಿ ಕ್ಯಾಬ್ ಚಾಲಕನೊಬ್ಬ ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸಿ ಹುಚ್ಚಾಟ ಮೆರೆದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಾರಿನ ಬಾನೆಟ್ ಮೇಲೆಯೇ ವ್ಯಕ್ತಿಯೊಬ್ಬನನ್ನು ಕೂರಿಸಿಕೊಂಡು ಸಾರ್ವಜನಿಕ ರಸ್ತೆಯಲ್ಲಿ ಚಾಲಕ ಕಾರು ಚಲಾಯಿಸಿಕೊಂಡು ಹೋಗಿದ್ದಾನೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚಾಲಕನ ಈ ನಿರ್ಲಕ್ಷ್ಯದ ಚಾಲನೆ ಹಾಗೂ ಅಪಾಯಕಾರಿ ಕೃತ್ಯಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ರಸ್ತೆಯಲ್ಲಿ ಸಾಗುತ್ತಿದ್ದ ಇತರೆ ವಾಹನ ಸವಾರರು ಹಾಗೂ ಹಾದಿಹೋಕರು ಈ ದೃಶ್ಯವನ್ನು ಕಂಡು ಬೆಚ್ಚಿಬಿದ್ದಿದ್ದು, ವ್ಯಕ್ತಿಯ ಜೀವಕ್ಕೆ ಅಪಾಯವನ್ನುಂಟು ಮಾಡುವ ರೀತಿಯಲ್ಲಿ ಚಾಲನೆ ಮಾಡಿದ ಚಾಲಕನ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.
ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ಸಾರ್ವಜನಿಕರ ಜೀವದ ಜೊತೆ ಆಟವಾಡಿದ ಚಾಲಕನನ್ನು ಪತ್ತೆಹಚ್ಚಿ, ಆತನ ವಿರುದ್ಧ ಕಾನೂನು ರೀತಿಯಲ್ಲಿ ಸೂಕ್ತ ಹಾಗೂ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.



