ಹರಪನಹಳ್ಳಿಯಲ್ಲಿ ಮಾದಕ ವ್ಯಸನ ವಿರೋಧಿ ಜಾಗೃತಿ: ‘ಆಪರೇಷನ್ ರೈಸ್’ ಹಾಗೂ ‘ಬೇಡ ಬ್ರೋ’ ಅಭಿಯಾನಕ್ಕೆ ಕರೆ

ಹರಪನಹಳ್ಳಿ: ಪಟ್ಟಣದ ಬಾಬು ಜಗಜೀವನ ರಾಮ್ ಸಭಾಂಗಣದಲ್ಲಿ ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಹರಪನಹಳ್ಳಿ ತಾಲೂಕಿನ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾದಕ ದ್ರವ್ಯ ಬಳಕೆಯಿಂದ ಉಂಟಾಗುವ ದುರಂತಗಳು, ಆರೋಗ್ಯ ಹಾಗೂ ಭವಿಷ್ಯದ ಮೇಲಾಗುವ ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು. ಅಲ್ಲದೆ, ಡ್ರಗ್ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯ ಪೊಲೀಸ್ ಇಲಾಖೆ ಕೈಗೊಂಡಿರುವ ‘ಆಪರೇಷನ್ ರೈಸ್’ (Operation RISE) ಹಾಗೂ ‘ಬೇಡ ಬ್ರೋ…’ ಅಭಿಯಾನಗಳ ಬಗ್ಗೆ ವಿವರವಾದ ಮಾಹಿತಿ ನೀಡಿ, ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸುವಂತೆ ಕೋರಲಾಯಿತು.
ಮಾದಕ ವ್ಯಸನದ ದುಷ್ಪರಿಣಾಮಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ವೇದಿಕೆಯಲ್ಲಿ ಪ್ರದರ್ಶಿಸಿದ ಅರ್ಥಪೂರ್ಣ ಕಿರುನಾಟಕವು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.
ಕಾರ್ಯಕ್ರಮದಲ್ಲಿ ಹರಪನಹಳ್ಳಿ ಕ್ಷೇತ್ರದ ಶಾಸಕರಾದ ಶ್ರೀಮತಿ ಎಂ.ಪಿ. ಲತಾ ಮಲ್ಲಿಕಾರ್ಜುನ, ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕರು, ಹರಪನಹಳ್ಳಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು (ಡಿವೈಎಸ್ಪಿ), ಹರಪನಹಳ್ಳಿ ವೃತ್ತದ ಸಿಪಿಐ, ಪಿಎಸ್ಐ ಹಾಗೂ ಪೊಲೀಸ್ ಸಿಬ್ಬಂದಿಯವರು ಉಪಸ್ಥಿತರಿದ್ದರು.



