ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ – ಕೋಟ್ಯಂತರ ಮೌಲ್ಯದ ಸರ್ಕಾರಿ ಜಮೀನು ವಶಕ್ಕೆ

ಬಳ್ಳಾರಿ: ಜಿಲ್ಲಾಡಳಿತವು ಬಳ್ಳಾರಿ ತಾಲೂಕಿನ ಮುಂಡರಗಿ ಕೈಗಾರಿಕಾ ಪ್ರದೇಶದ (ಹಂತ-1) ವ್ಯಾಪ್ತಿಯಲ್ಲಿ ತೆರವು ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಅಕ್ರಮವಾಗಿ ಒತ್ತುವರಿಯಾಗಿದ್ದ ಕೋಟ್ಯಂತರ ಮೌಲ್ಯದ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದಿದೆ.
ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ಬುಧವಾರ ಬೆಳಿಗ್ಗೆ ಈ ಬೃಹತ್ ತೆರವು ಕಾರ್ಯಾಚರಣೆ ನಡೆಯಿತು. ಮುಂಡರಗಿ ಗ್ರಾಮದ ಸರ್ವೇ ಸಂಖ್ಯೆ 177/2 ರ ವ್ಯಾಪ್ತಿಯಲ್ಲಿ 1.07 ಎಕರೆ ಸರ್ಕಾರಿ ಜಮೀನನ್ನು ಅತಿಕ್ರಮಿಸಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಶೆಡ್ಗಳನ್ನು ಬುಲ್ಡೋಜರ್ ಮೂಲಕ ನೆಲಸಮಗೊಳಿಸಲಾಯಿತು. ಇದರೊಂದಿಗೆ ಸರ್ವೇ ಸಂಖ್ಯೆ 322 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದ್ದ 11.40 ಎಕರೆ ಖರಾಬು ಜಮೀನನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.
ಎಚ್ಚರಿಕೆ ಫಲಕ ಅಳವಡಿಕೆ:
ಅನಧಿಕೃತವಾಗಿ ಸರ್ಕಾರಿ ಆಸ್ತಿಗಳನ್ನು ಕಬಳಿಸಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ತೆರವುಗೊಳಿಸಿದ ಜಮೀನಿನ ಜಾಗದಲ್ಲಿ ‘ಈ ಜಾಗವು ಸರ್ಕಾರಕ್ಕೆ ಸೇರಿದ್ದು, ಅತಿಕ್ರಮಣ ಮಾಡುವುದು ಶಿಕ್ಷಾರ್ಹ ಅಪರಾಧ’ ಎಂಬ ಮುನ್ನೆಚ್ಚರಿಕೆ ಫಲಕವನ್ನು ಅಳವಡಿಸಲಾಗಿದೆ.
ಕಾರ್ಯಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಈ ತೆರವು ಕಾರ್ಯಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್., ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಬಳ್ಳಾರಿ ತಾಲೂಕು ತಹಶೀಲ್ದಾರ್ ಟಿ. ರೇಖಾ, ಕಂದಾಯ ನಿರೀಕ್ಷಕರು (RI), ಗ್ರಾಮ ಆಡಳಿತಾಧಿಕಾರಿಗಳು (VAO) ಹಾಗೂ ಪೊಲೀಸ್ ಅಧಿಕಾರಿ ಸಿಬ್ಬಂದಿ ಭಾಗವಹಿಸಿದ್ದರು.



