ತಾಲೂಕುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುರಾಜ್ಯ ಸುದ್ದಿ

ಶಾಲೆಗಳಿಗೆ ಜಿಲ್ಲಾಧಿಕಾರಿ ರಾಹುಲ್‌ ತುಕಾರಾಮ್‌ ಪಾಂಡ್ವೆ ಭೇಟಿ – ಶೈಕ್ಷಣಿಕ ಪ್ರಗತಿ, ಮೂಲಸೌಕರ್ಯ ಪರಿಶೀಲನೆ

Share News

ಯಾದಗಿರಿ: ಜಿಲ್ಲಾಧಿಕಾರಿ ರಾಹುಲ್‌ ತುಕಾರಾಮ್‌ ಪಾಂಡ್ವೆ ಅವರು ಮಂಗಳವಾರ ಯಾದಗಿರಿ ತಾಲೂಕಿನ ಮುದ್ನಾಳ ಹಾಗೂ ಹೊನಗೇರಾ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ದಿಢೀರ್ ಭೇಟಿ ನೀಡಿ, ಶೈಕ್ಷಣಿಕ ಪ್ರಗತಿ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.

​ತರಗತಿ ಕೊಠಡಿಗಳು, ವಿದ್ಯಾರ್ಥಿಗಳ ಹಾಜರಾತಿ ಮತ್ತು ಬೋಧನಾ ಚಟುವಟಿಕೆಗಳ ಕುರಿತು ಶಿಕ್ಷಕರಿಂದ ಮಾಹಿತಿ ಪಡೆದ ಅವರು, ಶೈಕ್ಷಣಿಕ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

​ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ:

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, “ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಆತಂಕಕ್ಕೆ ಒಳಗಾಗದೆ ಆತ್ಮವಿಶ್ವಾಸದಿಂದ ಎದುರಿಸಬೇಕು. ನಿರಂತರ ಅಧ್ಯಯನ ಮತ್ತು ಶಿಕ್ಷಕರ ಸೂಕ್ತ ಮಾರ್ಗದರ್ಶನದಿಂದ ಉತ್ತಮ ಸಾಧನೆ ಸಾಧ್ಯ” ಎಂದು ಧೈರ್ಯ ತುಂಬಿದರು. ಶಿಕ್ಷಕರೂ ಸಹ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ನಿವಾರಿಸಿ ಧನಾತ್ಮಕ ವಾತಾವರಣ ನಿರ್ಮಿಸಬೇಕೆಂದು ತಿಳಿಸಿದರು.

​ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ:

ಅಕ್ಷರ ದಾಸೋಹ ಯೋಜನೆಯಡಿ ನೀಡಲಾಗುತ್ತಿರುವ ಬಿಸಿಯೂಟದ ಗುಣಮಟ್ಟ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಸ್ವತಃ ಮಕ್ಕಳೊಂದಿಗೆ ನೆಲದ ಮೇಲೆ ಕುಳಿತು ಊಟ ಸವಿದರು. ಉತ್ತಮ ಪೌಷ್ಟಿಕ ಆಹಾರವು ಮಕ್ಕಳ ಆರೋಗ್ಯ ಹಾಗೂ ಏಕಾಗ್ರತೆಗೆ ಅಗತ್ಯವಾಗಿದ್ದು, ಮಕ್ಕಳಿಗೆ ಗುಣಮಟ್ಟದ ಆಹಾರ ವಿತರಿಸುವಲ್ಲಿ ಯಾವುದೇ ಲೋಪವಾಗದಂತೆ ಸಿಬ್ಬಂದಿಗೆ ನಿರ್ದೇಶನ ನೀಡಿದರು.

​ಈ ಭೇಟಿಯ ವೇಳೆ ಡಿಡಿಪಿಐ ಚೆನ್ನಬಸಪ್ಪ ಮುಧೋಳ, ತಾಲೂಕು ಅಕ್ಷರ ದಾಸೋಹ ಅಧಿಕಾರಿ ಚೆನ್ನಪ್ಪ ಕಲ್ಮನಿ ಹಾಗೂ ಶಾಲೆಯ ಸಿಬ್ಬಂದಿ ಉಪಸ್ಥಿತರಿದ್ದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!