ಕುಮಾರಸ್ವಾಮಿ, ಜನಾರ್ಧನ ರೆಡ್ಡಿ, ರೇಣುಕಾಚಾರ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯ ಸರ್ಕಾರ ಪ್ಲಾನ್

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟ ನಡೆಸುತ್ತಿರುವ ಪಾದಯಾತ್ರೆ ಮತ್ತು ಪ್ರತಿಭಟನೆಗಳಿಗೆ ತಿರುಗೇಟು ನೀಡಲು ಕಾಂಗ್ರೆಸ್ ಸರ್ಕಾರ ಭಾರಿ ಕೌಂಟರ್ ತಂತ್ರ ರೂಪಿಸಿದೆ. ವಿಪಕ್ಷ ನಾಯಕರನ್ನು ಕಾನೂನು ಸಂಕಷ್ಟಕ್ಕೆ ಸಿಲುಕಿಸುವ ಭಾಗವಾಗಿ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಶಾಸಕ ಜಿ. ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಹಳೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಲು ಸಿದ್ಧತೆ ನಡೆಸುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಾಗೂ ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣಗಳಲ್ಲಿ ರಾಜಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಎದುರಿಸಲು ಈ ತಂತ್ರ ಹೆಣೆಯಲಾಗಿದೆ. ಈ ಪೈಕಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಸಾಯಿ ವೆಂಕಟೇಶ್ವರ ಮೈನಿಂಗ್ ಪ್ರಕರಣದ ಎಸ್ಐಟಿ (SIT) ವರದಿ, ಜಿ. ಜನಾರ್ದನ ರೆಡ್ಡಿ ಅವರ ಬಳ್ಳಾರಿ ಅಕ್ರಮ ಗಣಿಗಾರಿಕೆ ಪ್ರಕರಣ ಹಾಗೂ ಎಂ.ಪಿ. ರೇಣುಕಾಚಾರ್ಯ ಅವರ ಅಧಿಕಾರ ದುರುಪಯೋಗ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪಗಳ ತನಿಖಾ ವರದಿಗಳನ್ನು ಮುಂದಿಟ್ಟುಕೊಂಡು ರಾಜ್ಯಪಾಲರ ಮುಂದೆ ಪ್ರಾಸಿಕ್ಯೂಷನ್ ಅನುಮತಿಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ.
ವಿವಿಧ ಗಣಿ, ಭೂ ಅಕ್ರಮ ಹಾಗೂ ಭ್ರಷ್ಟಾಚಾರ ಆರೋಪಗಳ ಕುರಿತು ಲೋಕಾಯುಕ್ತ ಮತ್ತು ಎಸ್ಐಟಿ ಈಗಾಗಲೇ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರೂ, ಹಿಂದಿನ ಸರ್ಕಾರಗಳ ಅವಧಿಯಲ್ಲಿ ಈ ಪ್ರಕ್ರಿಯೆ ನನೆಗುದಿಗೆ ಬಿದ್ದಿತ್ತು. ಇದೀಗ ಪ್ರತಿಪಕ್ಷಗಳ ಭ್ರಷ್ಟಾಚಾರ ವಿರೋಧಿ ಹೋರಾಟಕ್ಕೆ ಕಾಂಗ್ರೆಸ್ ಕೂಡ ಕಾನೂನು ಸಮರ ಹಾಗೂ ರಾಜಕೀಯ ತಂತ್ರದ ಮೂಲಕವೇ ತಿರುಗೇಟು ನೀಡಲು ಮುಂದಾಗಿದ್ದು, ರಾಜ್ಯ ರಾಜಕಾರಣದಲ್ಲಿ ಕಾವು ಏರಿದೆ.



