೨೩ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಿಕ್ಷೆಗೊಳಗಾದ ಲಾರಿ ಚಾಲಕನ ಬಂಧನ: ಪಡುಬಿದ್ರಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

ಪಡುಬಿದ್ರಿ: ನ್ಯಾಯಾಲಯದಿಂದ ಶಿಕ್ಷೆಯಾಗಿದ್ದರೂ ಕಳೆದ ೨೩ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಪಡುಬಿದ್ರಿ ಠಾಣೆಯ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾರಾಷ್ಟ್ರ ರಾಜ್ಯದ ಪುನಾ ಜಿಲ್ಲೆ, ಉತ್ರಳ್ಳಿ ತಾಲೂಕಿನ ಬೋರ್ ನಿವಾಸಿ ವಿಲಾಸ್ ಶಿಂಧೆ ಬಂಧಿತ ಅಪರಾಧಿ.
ದಿನಾಂಕ ೦೭-೦೯-೨೦೦೨ರಂದು ಬೆಳಿಗ್ಗೆ ೮:೩೦ ಗಂಟೆಯ ಸುಮಾರಿಗೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಡಾ ಗ್ರಾಮದ ಮೂಳೂರು ಮಸೀದಿ ಬಳಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಮಿನಿ ಗೂಡ್ಸ್ ಲಾರಿಯನ್ನು (MH12FA6993) ಚಾಲಕ ವಿಲಾಸ್ ಶಿಂಧೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕನಿಗೆ ಡಿಕ್ಕಿ ಹೊಡೆದಿದ್ದನು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದನು.
ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆ ಪೂರ್ಣಗೊಳಿಸಿದ ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚಾಲಕ ವಿಲಾಸ್ ಶಿಂಧೆಗೆ ೩ ತಿಂಗಳ ಜೈಲು ಶಿಕ್ಷೆ ಹಾಗೂ ₹೧,೦೦೦/- ದಂಡ ವಿಧಿಸಿ ತೀರ್ಪು ನೀಡಿತ್ತು.
ನ್ಯಾಯಾಲಯದ ತೀರ್ಪು ಹೊರಬಿದ್ದ ನಂತರ ಅಪರಾಧಿ ಚಾಲಕ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕಳೆದ ೨೩ ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಮಾನ್ಯ ನ್ಯಾಯಾಲಯವು ಎಲ್‌ಪಿಸಿ (LPC) ವಾರಂಟ್ ಹೊರಡಿಸಿತ್ತು.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿರಾಮ್ ಶಂಕರ್ ಐಪಿಎಸ್ ಅವರ ಆದೇಶದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀ ಸುಧಾಕರ ಎಸ್. ನಾಯಕ್, ಕಾರ್ಕಳ ಉಪವಿಭಾಗದ ಡಿವೈಎಸ್‌ಪಿ ಶ್ರೀ ಎಸ್. ವಿಜಯಪ್ರಸಾದ್ ಹಾಗೂ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಆಲಿ ಅವರ ಮಾರ್ಗದರ್ಶನದಲ್ಲಿ, ಪಡುಬಿದ್ರಿ ಪೊಲೀಸ್ ಠಾಣೆಯ ಪಿಎಸ್‌ಐ ಶಕ್ತಿವೇಲು ಇ. ಮತ್ತು ಅನಿಲ್ ಕುಮಾರ್ ಟಿ. ನಾಯಕ್ ಅವರ ಸೂಚನೆಯಂತೆ ವಿಶೇಷ ತಂಡವನ್ನು ರಚಿಸಲಾಗಿತ್ತು.
ಸಿಬ್ಬಂದಿಗಳಾದ ಎಎಸ್‌ಐ ರಾಜೇಶ್ ಪಿ., ಹೆಚ್‌ಸಿ ಕೃಷ್ಣಪ್ರಸಾದ್ ಹಾಗೂ ಪಿಸಿ ಸಂದೇಶ್ ಭಂಡಾರಿ ಅವರಿದ್ದ ತಂಡವು, ಅಪರಾಧಿ ವಿಲಾಸ್ ಶಿಂಧೆ ಮಹಾರಾಷ್ಟ್ರದ ಪುಣೆಯಲ್ಲಿ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿರುವ ಬಗ್ಗೆ ನಿಖರ ಮಾಹಿತಿ ಸಂಗ್ರಹಿಸಿ, ಸ್ಥಳಕ್ಕೆ ತೆರಳಿ ಆತನನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.



