KSRTC ಬಸ್ – ಟ್ರ್ಯಾಕ್ಟರ್ ಭೀಕರ ಅಪಘಾತ; ಚಾಲಕ ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ನಾಗಮಂಗಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾಲೂಕಿನ ವರಹಸಂದ್ರ ಗೇಟ್ ಬಳಿ KSRTC ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಹಾಸನ ಮೂಲದ KSRTC ಬಸ್ ಚಾಲಕ ಶೇಖರ್ ಮೃತ ದುರ್ದೈವಿ.
ಘಟನೆಯ ವಿವರ:
ಕಬ್ಬಿಣದ ಬಾರ್‌ಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ KSRTC ಬಸ್ ಹಿಂಬದಿಯಿಂದ ಅತಿವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ ಕಬ್ಬಿಣದ ರಾಡ್ ಹಾಗೂ ಬಾರ್‌ಗಳು ಬಸ್‌ನ ಮುಂಭಾಗವನ್ನು ಸೀಳಿಕೊಂಡು ನೇರವಾಗಿ ಚಾಲಕ ಶೇಖರ್ ಅವರ ಮೈಮೇಲೆ ನುಗ್ಗಿದ ಪರಿಣಾಮ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ. ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
8 ಜನರ ಸ್ಥಿತಿ ಗಂಭೀರ:
ಅಪಘಾತದ ತೀವ್ರತೆಗೆ ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರ ಪೈಕಿ 8 ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ತಕ್ಷಣವೇ ಬೆಳ್ಳೂರಿನ ಆದಿಚುಂಚನಗಿರಿ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIMS) ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ನಡೆದ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



