ವಿಜಯನಗರ: ಪಡಿತರ ಅಕ್ಕಿ ಕಾಳಸಂತೆ ದಂಧೆಗೆ ಬ್ರೇಕ್; ಪೊಲೀಸರ ಭರ್ಜರಿ ಕಾರ್ಯಾಚರಣೆ, 24 ಸಾವಿರ ಕೆಜಿ ಅಕ್ಕಿ ಜಪ್ತಿ!

ಹೊಸಪೇಟೆ: ಬಡವರ ಹೊಟ್ಟೆ ಸೇರಬೇಕಿದ್ದ ಸರ್ಕಾರದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಬೃಹತ್ ಜಾಲವನ್ನು ವಿಜಯನಗರ ಜಿಲ್ಲೆಯ ಪೊಲೀಸರು ಬೇಧಿಸಿದ್ದಾರೆ. ಜಿಲ್ಲೆಯ ಎರಡು ಪ್ರತ್ಯೇಕ ಕಡೆಗಳಲ್ಲಿ ಮಿಂಚಿನ ದಾಳಿ ನಡೆಸಿದ ‘ಖಾಕಿ ಪಡೆ’ ಸುಮಾರು 24,320 ಕೆಜಿ ಅಕ್ಕಿಯನ್ನು ವಶಪಡಿಸಿಕೊಂಡು, ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿದೆ.
ಪ್ರಕರಣ 1: ಲಾರಿಯಲ್ಲಿ ಸಾಗಾಟವಾಗುತ್ತಿದ್ದ 18 ಟನ್ ಅಕ್ಕಿ ಜಪ್ತಿ
ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಯಾಸನಕೆರೆ ಗ್ರಾಮದ ಬಳಿ ಲಾರಿಯೊಂದರಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು, ಲಾರಿಯನ್ನು ತಡೆದು ತಪಾಸಣೆ ನಡೆಸಿದಾಗ ಬರೋಬ್ಬರಿ 18,240 ಕೆಜಿ ಅಕ್ಕಿ ಪತ್ತೆಯಾಗಿದೆ. ಇದರ ಅಂದಾಜು ಮೌಲ್ಯ 4,10,400 ರೂಪಾಯಿ ಎಂದು ತಿಳಿದುಬಂದಿದೆ.
ಇನ್ನೊಂದು ಪ್ರಕರಣದಲ್ಲಿ ಹೊಸಪೇಟೆ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಕುಬಾಳ ಗ್ರಾಮದ ಮನೆಯೊಂದರಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿತ್ತು. ಈ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು 6,080 ಕೆಜಿ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಇದರ ಮೌಲ್ಯ ಸುಮಾರು 2,10,388 ರೂಪಾಯಿ ಎಂದು ಅಂದಾಜಿಸಲಾಗಿದೆ.
ಎರಡೂ ಪ್ರಕರಣಗಳಲ್ಲಿ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮ ದಂಧೆಯಲ್ಲಿ ತೊಡಗಿದ್ದ ಆರೋಪಿಗಳ ವಿರುದ್ಧ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ದೂರುಗಳು ದಾಖಲಾಗಿವೆ.
“ಬಡವರ ಪಡಿತರವನ್ನು ಕಾಳಸಂತೆಗೆ ಮಾರಾಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಜಾಲದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆ ಮುಂದುವರಿಯಲಿದೆ,” ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವರದಿ:-ಆಂಟೋನಿ ಪತ್ರಕರ್ತ



