ಬೆಂಗಳೂರು-ಕನಕಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಯುವಕರು ಸ್ಥಳದಲ್ಲೇ ಸಾವು
ಬೆಂಗಳೂರು: ನಗರದ ಹೊರವಲಯದ ಕನಕಪುರ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಈ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರ ಕ್ರಾಸ್ ಬಳಿ ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಮತ್ತು ಲಾರಿ ಪರಸ್ಪರ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಮೃತಪಟ್ಟ ಯುವಕರನ್ನು ಈ ಕೆಳಗಿನಂತೆ ಗುರುತಿಸಲಾಗಿದೆ: ಸೈಯದ್ ಪಾಷ (22),ಯೂನಿಪ್ ಬಾನ್ (23),ಅಜರ್ ಪಾಷ (22)
ಕಾರಿನಲ್ಲಿದ್ದ ನಾಲ್ಕನೇ ಪ್ರಯಾಣಿಕ ಫರಾಜ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ರಾಜರಾಜೇಶ್ವರಿ ನಗರದ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಘಟನೆ ನಡೆದ ತಕ್ಷಣ ಕಗ್ಗಲಿಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಹೆದ್ದಾರಿಗಳಲ್ಲಿ ರಾತ್ರಿ ವೇಳೆ ಸಂಚರಿಸುವಾಗ ಅತಿಯಾದ ವೇಗ ಮತ್ತು ಅಜಾಗರೂಕತೆ ಇಂತಹ ದುರಂತಗಳಿಗೆ ಕಾರಣವಾಗುತ್ತಿದೆ. ವಾಹನ ಸವಾರರು ಎಚ್ಚರಿಕೆಯಿಂದ ಇರಲು ಪೊಲೀಸರು ಮನವಿ ಮಾಡಿದ್ದಾರೆ.
*ವರದಿ :- ಆಂಟೋನಿ ಪತ್ರಕರ್ತ*



