ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ಅಂತ್ಯಕ್ರಿಯೆಗೆ ತೆರಳುತ್ತಿದ್ದ ಆಟೋ ಪಲ್ಟಿ; ಹಲವರಿಗೆ ಗಾಯ, 108 ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬದುಕುಳಿದ ಜೀವಗಳು

Share News

ಯಾದಗಿರಿ: ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಆಟೋದಲ್ಲಿ ತೆರಳುತ್ತಿದ್ದ ಸಾರ್ವಜನಿಕರು ಅಪಘಾತಕ್ಕೀಡಾಗಿ ಹಲವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಯಾದಗಿರಿ ತಾಲೂಕಿನ ಕೌಳೂರು–ಲಿಂಗೇರಿ ಗ್ರಾಮದ ಮಧ್ಯೆ ಸಂಭವಿಸಿದೆ.

​ಬಾಡಿಯಾಳ ಗ್ರಾಮದಲ್ಲಿ ನಡೆಯಬೇಕಿದ್ದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಗಾಯಾಳುಗಳು ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಆಟೋ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಆಟೋದಲ್ಲಿದ್ದ ಹಲವರು ಗಾಯಗೊಂಡಿದ್ದು, ಕೆಲವರಿಗೆ ತೀವ್ರ ಸ್ವರೂಪದ ಪೆಟ್ಟಾಗಿದ್ದರೆ, ಇನ್ನು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳೀಯ ನಿವಾಸಿಗಳು ರಕ್ಷಣಾ ಕಾರ್ಯಕ್ಕೆ ಧಾವಿಸಿದರು. ಇದೇ ಸಂದರ್ಭದಲ್ಲಿ ಮಾಹಿತಿ ಪಡೆದ 108 ತುರ್ತು ವೈದ್ಯಕೀಯ ಸೇವೆಯ ಸಿಬ್ಬಂದಿ ಕ್ಷಣಮಾತ್ರದಲ್ಲಿ ಸ್ಥಳಕ್ಕೆ ಧಾವಿಸಿ ಬಂದರು. ತೀವ್ರವಾಗಿ ರಕ್ತಸ್ರಾವವಾಗುತ್ತಿದ್ದ ಗಾಯಾಳುಗಳಿಗೆ ಸ್ಥಳದಲ್ಲೇ ತುರ್ತು ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಸುರಕ್ಷಿತವಾಗಿ ಆಂಬುಲೆನ್ಸ್ ಮೂಲಕ ಸಮೀಪದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರು.

ಸ್ಥಳೀಯರ ತಕ್ಷಣದ ಸ್ಪಂದನೆ ಹಾಗೂ 108 ಆಂಬುಲೆನ್ಸ್ ಸಿಬ್ಬಂದಿಯ ಅದ್ಭುತ ಸಮಯಪ್ರಜ್ಞೆ ಮತ್ತು ಮಾನವೀಯ ಸೇವೆಯಿಂದಾಗಿ ಗಾಯಾಳುಗಳಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆತು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ತುರ್ತು ಸಂದರ್ಭಗಳಲ್ಲಿ ಸಿಬ್ಬಂದಿ ತೋರಿದ ಈ ಕರ್ತವ್ಯ ನಿಷ್ಠೆಗೆ ಸಾರ್ವಜನಿಕರು ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಪಘಾತಕ್ಕೆ ಆಟೋದ ಅತಿವೇಗ ಕಾರಣವೇ ಅಥವಾ ತಾಂತ್ರಿಕ ದೋಷವೇ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!