ಶಿಕ್ಷಣ ಸಚಿವ ಮಧು ಬಂಗಾರಪ್ಪ ನೂತನ ಕಚೇರಿ ಉದ್ಘಾಟನೆ: ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ ಭಾಗಿ!

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರ ವಿಧಾನಸೌಧದ ಎರಡನೇ ಮಹಡಿಯಲ್ಲಿರುವ ನೂತನ ಕಚೇರಿಯ (ಕೊಠಡಿ ಸಂಖ್ಯೆ 262, 262(A)) ದೇವತಾ ಪ್ರಾರ್ಥನೆ ಹಾಗೂ ಪೂಜಾ ಕಾರ್ಯಕ್ರಮ ಇಂದು ಶ್ರದ್ಧಾಭಕ್ತಿಯಿಂದ ನೆರವೇರಿತು. ಈ ಶುಭ ಸಮಾರಂಭದಲ್ಲಿ ಶಾಸಕರಾದ ಭೀಮಣ್ಣ ನಾಯ್ಕ ಅವರು ಪಾಲ್ಗೊಂಡು ಸಚಿವರಿಗೆ ಅಭಿನಂದನೆ ಸಲ್ಲಿಸಿದರು.
ಪ್ರಮುಖ ಗಣ್ಯರ ಉಪಸ್ಥಿತಿ:
ಈ ವಿಶೇಷ ಕಾರ್ಯಕ್ರಮದಲ್ಲಿ ಶಾಸಕರಾದ ಭೀಮಸೇನ ಬಿ. ಚಿಮ್ಮನಕಟ್ಟಿ, ಪಕ್ಷದ ಹಿರಿಯ ನಾಯಕರು, ಶಿಕ್ಷಣ ಇಲಾಖೆಯ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು, ಕಚೇರಿಯ ಸಿಬ್ಬಂದಿ ವರ್ಗ ಮತ್ತು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದು ಸಚಿವ ಮಧು ಬಂಗಾರಪ್ಪನವರಿಗೆ ಶುಭಾಶಯ ಕೋರಿದರು.
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಬೆಂಬಲ:
ಇದೇ ವೇಳೆ ಶುಭ ಹಾರೈಸಿ ಮಾತನಾಡಿದ ಶಾಸಕ ಭೀಮಣ್ಣ ನಾಯ್ಕ ಅವರು, “ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಅಭೂತಪೂರ್ವ ಸಕಾರಾತ್ಮಕ ಬದಲಾವಣೆ ತಂದು, ನಾಡಿನ ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ಸಚಿವ ಮಧು ಬಂಗಾರಪ್ಪ ಶ್ರಮಿಸುತ್ತಿದ್ದಾರೆ. ಅವರ ಈ ಪ್ರಾಮಾಣಿಕ ಪ್ರಯತ್ನಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಅವರ ನೇತೃತ್ವದಲ್ಲಿ ರಾಜ್ಯದ ಶಿಕ್ಷಣ ಕ್ಷೇತ್ರ ಮತ್ತಷ್ಟು ಸಾಧನೆಯ ಶಿಖರಕ್ಕೇರಲಿ” ಎಂದು ಆಶಂಸಿಸಿದರು.



