ಬಜಪೆ: ಶ್ರೀ ರಾಮಾಂಜನೇಯ ದೇವಸ್ಥಾನದ ಹುಂಡಿ ಕಳ್ಳತನ; ತಮಿಳುನಾಡು ಮೂಲದ ಅಂತರರಾಜ್ಯ ಕಳ್ಳನ ಬಂಧನ

ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು, ತಮಿಳುನಾಡು ಮೂಲದ ಅಂತರರಾಜ್ಯ ಆರೋಪಿಯನ್ನು ಬಂಧಿಸಿದ್ದಾರೆ.
ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25) ಬಂಧಿತ ಆರೋಪಿ. ಈತ ವೃತ್ತಿಪರ ಕಳ್ಳನಾಗಿದ್ದು, ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕಳ್ಳತನ ಎಸಗಿ ಮರಳಿ ಪರಾರಿಯಾಗುವ ಚಾಳಿ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಮಾರ್ಚ್ 3, 2026 ರಂದು ಕೆಂಜಾರು ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ್ದ ಆರೋಪಿ, ದೇವಸ್ಥಾನದ ಮೂರು ಕಾಣಿಕೆ ಹುಂಡಿಗಳನ್ನು ಒಡೆದು ಸುಮಾರು 25,000 ರೂಪಾಯಿ ನಗದು ದೋಚಿದ್ದನು. ಈ ಬಗ್ಗೆ ಬಜಪೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ಗಂಭೀರತೆ ಪರಿಗಣಿಸಿ ರಚಿಸಲಾಗಿದ್ದ ವಿಶೇಷ ತಂಡವು ಮಾರ್ಚ್ 31 ರಂದು ಖಚಿತ ಮಾಹಿತಿಯ ಮೇರೆಗೆ ಆರೋಪಿಯನ್ನು ಸೆರೆಹಿಡಿದಿದೆ.
ಪೊಲೀಸರ ವಿಚಾರಣೆ ವೇಳೆ ಆರೋಪಿ ಕೆಂಜಾರು ದೇವಸ್ಥಾನದ ಕಳವು ಮಾತ್ರವಲ್ಲದೆ, ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ಫೆಬ್ರವರಿ ಕೊನೆಯ ವಾರದಲ್ಲಿ ಪಣಂಬೂರು ಠಾಣಾ ವ್ಯಾಪ್ತಿಯ ತೋಕೂರು-ಜೊಕಟ್ಟೆಯಲ್ಲಿ ನಡೆದಿದ್ದ ಮೋಟಾರ್ ಸೈಕಲ್ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
ಬಜಪೆ ಪೊಲೀಸ್ ನಿರೀಕ್ಷಕ ಬಾಲಕೃಷ್ಣ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ನೂತನ್, ರಾಜೇಶ್ ಹಾಗೂ ಪ್ರಕಾಶ್ ಅವರನ್ನೊಳಗೊಂಡ ತಂಡವು ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಬಂಧಿತನಿಂದ ಕಳುವಾಗಿದ್ದ ಹುಂಡಿಯನ್ನು ವಶಪಡಿಸಿಕೊಳ್ಳಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.



