*ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಜಿ. ಬಸವರಾಜ್ ಕಾರು ಅಪಘಾತ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು*

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಜಿ. ಬಸವರಾಜ್ ಅವರ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ನ್ಯಾಯಮೂರ್ತಿಗಳು ಹಾಗೂ ಕಾರಿನಲ್ಲಿದ್ದ ಇತರರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ ಈ ಸಂಭವಿಸಿದೆ. ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಹಠಾತ್ತನೆ ಅಡ್ಡ ಬಂದ ಹಿನ್ನೆಲೆಯಲ್ಲಿ, ಅವರನ್ನು ರಕ್ಷಿಸಲು ಹೋಗಿ ಈ ಸರಣಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಪೊಲೀಸ್ ವಾಹನಕ್ಕೆ ಡಿಕ್ಕಿ: ಅಡ್ಡ ಬಂದ ವ್ಯಕ್ತಿಯನ್ನು ತಪ್ಪಿಸಲು ಹೋದಾಗ ನ್ಯಾಯಮೂರ್ತಿಗಳ ರಕ್ಷಣೆಗಿದ್ದ ಪೊಲೀಸ್ ಎಸ್ಕಾರ್ಟ್ ವಾಹನ ನಿಯಂತ್ರಣ ತಪ್ಪಿ ರಸ್ತೆಯ ಸಿಮೆಂಟ್ ಸ್ಲ್ಯಾಬ್‌ಗೆ ಡಿಕ್ಕಿ ಹೊಡೆದಿದೆ.
ಸರಣಿ ಅಪಘಾತ: ಎಸ್ಕಾರ್ಟ್ ವಾಹನ ಹಠಾತ್ ಬ್ರೇಕ್ ಹಾಕಿದ ಪರಿಣಾಮ, ಅದರ ಹಿಂದೆಯೇ ಬರುತ್ತಿದ್ದ ನ್ಯಾಯಮೂರ್ತಿಗಳ ಕಾರು ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಈ ಘಟನೆಯಲ್ಲಿ ಪೊಲೀಸ್ ವಾಹನದ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನ್ಯಾಯಮೂರ್ತಿ ಜಿ. ಬಸವರಾಜ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಸುರಕ್ಷಿತವಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ ಸಂಚಾರ ಸುಗಮಗೊಳಿಸಲಾಗಿದೆ.
*ವರದಿ :- ಆಂಟೋನಿ ಪತ್ರಕರ್ತ*



