ಸಾಲಬಾಧೆ ತಾಳಲಾರದೆ ಮನನೊಂದ ರೈತ ನೇಣಿಗೆ ಶರಣು

ಹರಿಹರ: ಸಾಲಬಾಧೆ ತಾಳಲಾರದೆ ಮನನೊಂದ ರೈತರೊಬ್ಬರು ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುಃಖದಾಯಕ ಘಟನೆ ತಾಲೂಕಿನ ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಹರಿಹರ ತಾಲೂಕಿನ ಕುಂಬಳೂರು ಗ್ರಾಮದ ನಿವಾಸಿಯಾದ ಕಡೂರ್ ಹನುಮಂತಪ್ಪ (45) ಆತ್ಮಹತ್ಯೆಗೆ ಶರಣಾದ ದುರ್ದೈವಿ ರೈತರಾಗಿದ್ದಾರೆ.
ಮೃತ ಹನುಮಂತಪ್ಪ ಅವರು ಕುಂಬಳೂರು ಗ್ರಾಮದಲ್ಲಿ 36 ಗುಂಟೆ ಸ್ವಂತ ಜಮೀನು ಹೊಂದಿದ್ದು, ಅದರಲ್ಲಿ ವ್ಯವಸಾಯ ಮಾಡಿಕೊಂಡಿದ್ದರು. ಕೃಷಿ ಚಟುವಟಿಕೆಗಳಿಗಾಗಿ ಹಾಗೂ ಕುಟುಂಬದ ನಿರ್ವಹಣೆಗಾಗಿ ಅವರು ಕುಂಬಳೂರು ಗ್ರಾಮೀಣ ಬ್ಯಾಂಕ್ ಹಾಗೂ ಸ್ಥಳೀಯ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಸಾಲ ಮಾಡಿದ್ದರು ಎನ್ನಲಾಗಿದೆ.
ಆದರೆ, ಕೃಷಿಯಲ್ಲಿ ನಿರೀಕ್ಷಿತ ಆದಾಯ ಬಾರದೇ ಇರುವುದು ಹಾಗೂ ಸಾಲ ತೀರಿಸಲು ಸಾಧ್ಯವಾಗದೇ ಇದ್ದುದರಿಂದ ತೀವ್ರವಾಗಿ ಮನನೊಂದಿದ್ದರು. ಸಾಲಗಾರರ ಒತ್ತಡ ಹಾಗೂ ಆರ್ಥಿಕ ಸಂಕಷ್ಟದಿಂದಾಗಿ ಕಂಗಾಲಾಗಿದ್ದ ಅವರು ಕೊನೆಗೆ ತೀವ್ರ ನಿರ್ಧಾರ ಕೈಗೊಂಡಿದ್ದಾರೆ.
ತೀವ್ರ ಸಾಲಬಾಧೆಯಿಂದ ಬಳಲುತ್ತಿದ್ದ ಹನುಮಂತಪ್ಪ ಅವರು ಕೊಮಾರನಹಳ್ಳಿ ಅರಣ್ಯ ಪ್ರದೇಶಕ್ಕೆ ತೆರಳಿ, ಅಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ. ಅರಣ್ಯದಲ್ಲಿ ಅವರ ಮೃತದೇಹ ಪತ್ತೆಯಾಗುತ್ತಿದ್ದಂತೆ ಕುಟುಂಬಸ್ಥರ ಹಾಗೂ ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಷಯ ತಿಳಿಯುತ್ತಿದ್ದಂತೆ ಮಲೆಬೆನ್ನೂರು ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.



