ಬೀದರ್ ಜಿಲ್ಲಾ ಪೊಲೀಸ್ ಹಾಗೂ ಹುಲಸೂರು ಪೊಲೀಸರಿಂದ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ: ವಿದ್ಯಾರ್ಥಿಗಳಲ್ಲಿ ಅರಿವು ಜಾಗೃತಿ

ಬೀದರ್: ಬೀದರ್ ಜಿಲ್ಲೆಯನ್ನು ‘ನಶಾ ಮುಕ್ತ’ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಹುಲಸೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯ ದುರುಪಯೋಗ, ಅಕ್ರಮ ಸಾಗಾಣಿಕೆ ವಿರೋಧಿ ದಿನ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿಶೇಷ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪ್ರದೀಪ್ ಗುಂಟಿ, ಐ.ಪಿ.ಎಸ್. ಅವರ ನಿರ್ದೇಶನದಂತೆ ನಡೆದ ಈ ಕಾರ್ಯಕ್ರಮದಲ್ಲಿ ಹುಲಸೂರು ಠಾಣೆಯ ಪಿ.ಎಸ್.ಐ ಪಂಡಿತ್ ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಯುವಜನತೆ ಮಾದಕ ವ್ಯಸನದ ಕ್ಷಣಿಕ ಆಕರ್ಷಣೆಗೆ ಒಳಗಾಗಿ ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳಬಾರದು. ಗಾಂಜಾ ಹಾಗೂ ಇತರೆ ಮಾದಕ ವಸ್ತುಗಳ ಹಾವಳಿಗೆ ತುತ್ತಾಗದೆ, ಸಮಾಜದಲ್ಲೂ ಈ ದುಷ್ಟಪದ್ಧತಿಯು ಹರಡದಂತೆ ತಡೆಯಲು ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.
ತಮ್ಮ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ನಿರ್ಮೂಲನೆಗೆ ನಿರಂತರ ಜಾಗೃತಿ ಮೂಡಿಸುತ್ತಿರುವ ಹುಲಸೂರು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವೈಖರಿಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
ಪೊಲೀಸ್ ವರಿಷ್ಠಾಧಿಕಾರಿಗಳ ಮನವಿ:
“ಬೀದರ್ ಜಿಲ್ಲೆಯನ್ನು ಸಂಪೂರ್ಣವಾಗಿ ಮಾದಕ ವಸ್ತು ಮುಕ್ತ ಜಿಲ್ಲೆಯನ್ನಾಗಿ ಪರಿವರ್ತಿಸಲು ಸಾರ್ವಜನಿಕರು ಹಾಗೂ ಯುವಜನತೆ ಜಿಲ್ಲಾ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ ಸಂಪೂರ್ಣ ಸಹಕಾರ ನೀಡಬೇಕು.”
– ಪ್ರದೀಪ್ ಗುಂಟಿ, ಐ.ಪಿ.ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಬೀದರ್.



