ಶಾಂತಿ ಸುವ್ಯವಸ್ಥೆ ಕಾಪಾಡಲು ಭಟ್ಕಳ ತಾಲೂಕಿನಲ್ಲಿ ಎರಡು ದಿನ ಮದ್ಯ ಮಾರಾಟ ಸಂಪೂರ್ಣ ನಿಷೇಧ: ಜಿಲ್ಲಾಧಿಕಾರಿ ಆದೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ನಡೆಯಲಿರುವ ಪ್ರಸಿದ್ಧ ಶ್ರೀ ಮಾರಿ ಜಾತ್ರೆಯ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನಾದ್ಯಂತ ಎರಡು ದಿನಗಳ ಕಾಲ ಮದ್ಯ ಮಾರಾಟ ಹಾಗೂ ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಆಗಸ್ಟ್ 5ರ ಬೆಳಿಗ್ಗೆ 5 ಗಂಟೆಯಿಂದ ಆಗಸ್ಟ್ 6ರ ಮಧ್ಯರಾತ್ರಿ 12 ಗಂಟೆಯವರೆಗೆ ಭಟ್ಕಳ ತಾಲೂಕು ವ್ಯಾಪ್ತಿಯ ಎಲ್ಲಾ ರೀತಿಯ ಮದ್ಯದ ಅಂಗಡಿಗಳು, ವೈನ್ ಶಾಪ್ಗಳು, ಬಾರ್ ಮತ್ತು ರೆಸ್ಟೋರೆಂಟ್ಗಳನ್ನು ಸಂಪೂರ್ಣವಾಗಿ ಬಂದ್ ಮಾಡುವಂತೆ ಸೂಚಿಸಿದ್ದಾರೆ.
ಈ ಅವಧಿಯಲ್ಲಿ ತಾಲೂಕಿನಾದ್ಯಂತ ಯಾವುದೇ ರೀತಿಯ ಮದ್ಯ ಸಾಗಾಟ ಹಾಗೂ ಅಕ್ರಮ ಮಾರಾಟ ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಜಾತ್ರೆ ಮತ್ತು ಸಾರ್ವಜನಿಕ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯಲು ಸಾರ್ವಜನಿಕರು ಹಾಗೂ ವರ್ತಕರು ಜಿಲ್ಲಾಡಳಿತದ ಈ ಆದೇಶಕ್ಕೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.



